ಬಂಟ್ವಾಳ, — ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ಪುರಸಭಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ನೂತನ ವೃತ್ತದ ಅವೈಜ್ಞಾನಿಕ ನಿರ್ಮಾಣ ಹಾಗೂ ರಾಷ್ಟ್ರೀಯ ಹೆದ್ದಾರಿಯ ಮಂದಗತಿಯ ಕಾಮಗಾರಿಯ ವಿರುದ್ಧ ಇಂದು ಬಿ ಸಿ ರೋಡ್ ನಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಅವರು,
ಕಲ್ಲಡ್ಕ ಮೇಲ್ಸೇತುವೆಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಪ್ರತಿನಿಧಿಯೂ ಅಲ್ಲದ ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ನಡೆಸಿರುವುದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ದೌರ್ಬಲ್ಯ ಎಂದು ಟೀಕಿಸಿದರು. ಕೇರಳದಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ಪೂರ್ಣಗೊಂಡು ಸಂಚಾರ ಆರಂಭವಾದರೂ, ಬಿ.ಸಿ.ರೋಡ್–ಕಲ್ಲಡ್ಕ ಚತುಷ್ಪಥ ಕಾಮಗಾರಿ ಮಾತ್ರ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ ಎಂದು ಹೇಳಿದರು.

ಬಿ.ಸಿ.ರೋಡಿನಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ವೃತ್ತವು ಕಳೆದ ವಾರ ನಡೆದ ಅಪಘಾತಕ್ಕೆ ಕಾರಣವಾಗಿ ಮೂವರು ಪ್ರಾಣ ಕಳೆದುಕೊಂಡಿರುವುದು ದುಃಖಕರ. ಈ ವೃತ್ತವನ್ನು ತಕ್ಷಣ ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಳ್ಳಬೇಕು. ವೃತ್ತವನ್ನು ತೆರವುಗೊಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಅಶ್ರಫ್ ತಲಪಾಡಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು ವಹಿಸಿದ್ದರು. ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಎಸ್‌ಎಚ್ ಮತ್ತು ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಹೇಳಿದರು.
ಪ್ರತಿಭಟನಾ ವೇದಿಕೆಯಿಂದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು ಹಾಗೂ ಮೊನ್ನೆ ಅಪಘಾತದಲ್ಲಿ ಮರಣ ಹೊಂದಿದವರಿಗೆ ಒಂದು ನಿಮಿಷ ಮೌನ ಪ್ರಾರ್ಥನೆಯನ್ನು ಮಾಡಲಾಯಿತು.


