ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮುಂದುವರಿದಿರುವ ಅವ್ಯವಸ್ಥೆಗಳು ಮತ್ತೆ ಬೆಳಕಿಗೆ ಬಂದಿವೆ. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿನ ಮೂಲಸೌಕರ್ಯಗಳ ಕೊರತೆ, ರೋಗಿಗಳಿಗೆ ಸರಿಯಾದ ಸೇವೆಗಳ ಅಭಾವ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ವ್ಯವಸ್ಥೆಯನ್ನು ಸರಿಪಡಿಸುವಂತೆ ಕಠಿಣವಾಗಿ ಆಗ್ರಹಿಸಿದರು.
“ಜನರ ಆರೋಗ್ಯದ ಜೊತೆ ನಿರ್ಲಕ್ಷ್ಯ ಸಹಿಸಲಾರದದ್ದು” ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸಾದ್, ರಾಜ್ಯ ಸಮಿತಿ ಸದಸ್ಯ ಫಯಾಜ್ ಅಹಮದ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಬಸವರಾಜಪ್ಪ, ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಮೋಹಸಿನ್ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಸಮಿತಿ ಸದಸ್ಯರಾದ ಆದಿಲ್, ಅಶ್ರಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



