ಬೆಳ್ತಂಗಡಿ (ಫೆ-12): ಇಡೀ ತಾಲೂಕನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಅಪಹರಣ ಯತ್ನ ಪ್ರಕರಣವನ್ನು ಅತ್ಯಂತ ಕ್ಷಿಪ್ರವಾಗಿ ತನಿಖೆ ನಡೆಸಿ,ಒಂದೆರಡು ದಿನಗಳ ಅವಧಿಯಲ್ಲಿ ಸತ್ಯಾಂಶವನ್ನು ಸಾರ್ವಜನಿಕರ ಮುಂದೆ ತೆರೆದಿಟ್ಟ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯು ಅಭಿನಂದಿಸುತ್ತದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು, “ಬೆಳ್ತಂಗಡಿಯಲ್ಲಿ ನಡೆದಿದೆ ಎನ್ನಲಾದ ಬಾಲಕಿಯ ಕಿಡ್ನಾಪ್ ಪ್ರಕರಣವು ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಸ್ಥಳೀಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆಯ ಮೂಲಕ ಇದೊಂದು ಸುಳ್ಳು ದೂರು ಎಂಬುದನ್ನು ಪತ್ತೆಹಚ್ಚಿದ್ದಾರೆ. ಬಾಲಕಿಗೆ ಕಾಲೇಜು ಬದಲಾಯಿಸುವ ಹಠವಿದ್ದ ಕಾರಣ ಈ ರೀತಿ ಕಥೆ ಕಟ್ಟಿರುವುದಾಗಿ ಸ್ವತಃ ಬಾಲಕಿಯೇ ಒಪ್ಪಿಕೊಂಡಿರುವುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಅರಿತು ತನಿಖೆ ನಡೆಸಿದ ಪೊಲೀಸರು, ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದವರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಇಂತಹ ಘಟನೆಗಳ ಬಗ್ಗೆ ತಕ್ಷಣವೇ ಸ್ಪಂದಿಸಿ ಸತ್ಯವನ್ನು ಬಹಿರಂಗಪಡಿಸಿದ ಪೊಲೀಸರ ಕ್ರಮವು ಶ್ಲಾಘನೀಯ. ಸಾರ್ವಜನಿಕರು ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.


