
ಬೆಳ್ತಂಗಡಿ : ಪ್ರಸಿದ್ಧ ಪ್ರವಾಸಿ ಹಾಗೂ ಚಾರಣ ತಾಣವಾದ ಬೆಳ್ತಂಗಡಿಯ ಗಡಾಯಿಕಲ್ಲು ಚಾರಣವನ್ನು ಜುಲೈ 8 ರಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಮುಂಗಾರು ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಗಡಾಯಿಕಲ್ಲು ಕಡಿದಾದ ಬಂಡೆ ದಾರಿಗಳು ಜಾರುವಂತಾಗಿದ್ದು, ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಮಳೆಗಾಲದಲ್ಲಿ ಮೆಟ್ಟಿಲುಗಳ ಮೇಲೆ ಪಾಚಿ ಕಟ್ಟುವುದರಿಂದ ಮತ್ತು ಮಂಜು ಕವಿದ ವಾತಾವರಣ ಇರುವುದರಿಂದ ಚಾರಣ ಮಾಡುವುದು ಅತ್ಯಂತ ಅಪಾಯಕಾರಿಯಾಗಿದೆ. ಪ್ರವಾಸಿಗರ ಜೀವ ರಕ್ಷಣೆ ನಮಗೆ ಮುಖ್ಯ. ಹೀಗಾಗಿ ಜುಲೈ 8 ರಿಂದ ಮುಂದಿನ ಆದೇಶದವರೆಗೆ ಸಾರ್ವಜನಿಕರು ಮತ್ತು ಚಾರಣಿಗರಿಗೆ ಗಡಾಯಿಕಲ್ಲು ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಗಾರು ಮಳೆ ಕಡಿಮೆಯಾದ ಬಳಿಕ ಚಾರಣಕ್ಕೆ ಮತ್ತೆ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.


